ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರ ತಾರಕಕ್ಕೆ ; ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಂದ ಮತದಾರರ ಮನಗೆಲ್ಲಲು ಮುಂದುವರೆದ ಪ್ರಯತ್ನ.

ಗುಜರಾತ್ ವಿಧಾನಸಭೆಯ ಮೊದಲ ಹಂತದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ವಿವಿಧ ರಾಜಕೀಯ ಪಕ್ಷಗಳು ತೀವ್ರ ಪ್ರಚಾರದಲ್ಲಿ ನಿರತವಾಗಿವೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರದಲ್ಲಿ ನಿರತವಾಗಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಸೇರಿದಂತೆ ಅನೇಕ ನಾಯಕರು ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಗುಜರಾತ್‌ನ ಅನೇಕ ಕಡೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದು, ಕಚ್, ಮೊರ್ಬಿ ಮತ್ತು ಸುರೇಂದ್ರ ನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ರಾಜ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ರಾಜ್‌ಕೋಟ್ ಮತ್ತು ಜಾಮ್‌ನಗರಗಳಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ.

ಮೊದಲ ಹಂತದ ವಿಧಾನಸಭಾ ಚುನಾವಣೆ ಕಚ್, ಸೌರಾಷ್ಟ್ರ, ದಕ್ಷಿಣ ಗುಜರಾತ್ ಸೇರಿದಂತೆ ೧೯ ಜಿಲ್ಲೆಗಳಲ್ಲಿ ಮುಂದಿನ ಶನಿವಾರ ನಡೆಯಲಿದ್ದು, ಮತದಾನಕ್ಕಾಗಿ ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.