ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹಿನ್ನೆಲೆ -ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಕಸರತ್ತು ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವುದರಿಂದ ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಕಸರತ್ತು ನಡೆಯುತ್ತಿದೆ.

ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.  ನಂತರ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ತಮಗೆ ಅಗತ್ಯ ಬಹುಮತವಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕಾಂಗ್ರೆಸ್ ಮತ್ತು ಜೆಡಿಎಸ್ ಹಿಂಬದಿ ಬಾಗಿಲಿನಿಂದ ಹೋಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಜನತೆ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ.  ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಯಾವ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಬೇಕೆಂದು ರಾಜ್ಯಪಾಲರು ನಿರ್ಧರಿಸಬೇಕು ಎಂದು ಅವರು ಹೇಳಿದರು.