ಕರ್ನಾಟಕ ವಿಧಾನಸಭೆಯಲ್ಲಿ ನಾಳೆ ಸಂಜೆ ೪ ಗಂಟೆಗೆ ಬಹುಮತ ಪರೀಕ್ಷೆಗೆ ಸುಪ್ರೀಂಕೋರ್ಟ್ ಆದೇಶ.

ಕರ್ನಾಟಕದಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿ, ಬಹುಮತ ಸಾಬೀತುಪಡಿಸಲು ೧೫ ದಿನ ಕಾಲಾವಕಾಶ ನೀಡಿದ್ದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಈ ಬೆಳಗ್ಗೆ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಸಂಜೆ ೪ ಗಂಟೆಗೆ  ವಿಶ್ವಾಸಮತಯಾಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠ ಆದೇಶ ನೀಡಿದೆ ಮತ್ತು ಮತದಾನದ ವಿಡಿಯೋ ಚಿತ್ರೀಕರಣಕ್ಕೆ ಅವಕಾಶದ ಮನವಿಯನ್ನು ತಳ್ಳಿಹಾಕಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಹಾಗೂ ಬಿಜೆಪಿ ಪರವಾಗಿ ಹಿರಿಯ ನ್ಯಾಯವಾದಿ ಮುಕುಲ್ ರೋಹಟ್ಗಿ ವಾದಗಳನ್ನು ಮಂಡಿಸಿದರು. ಕರ್ನಾಟಕದಲ್ಲಿ ಸರ್ಕಾರ ರಚನೆಯ ಕುರಿತು ವಿವಾದ ಇರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸಲು ಯಡಿಯೂರಪ್ಪ ಅವರಿಗೆ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಕರ್ನಾಟಕದ ೧೪ನೇ ವಿಧಾನಸಭೆಯ ಅವಧಿ ಪೂರ್ಣಗೊಂಡಿದ್ದು, ೧೫ನೇ ವಿಧಾನಸಭೆಯ ರಚನೆಗೆ ಮೊದಲು ಹಂಗಾಮಿ ಸಭಾಧ್ಯಕ್ಷರ ಆಯ್ಕೆಯಾಗಬೇಕು, ನಂತರವೇ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ನಡೆದು, ಆಮೇಲೆ ಬಹುಮತ ಸಾಬೀತು ಪ್ರಕ್ರಿಯೆ ನಡೆಯಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಅಲ್ಲದೇ ಯಡಿಯೂರಪ್ಪ ಅವರು ಯಾವುದೇ ಅಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ. ವಿಶ್ವಾಸಮತಯಾಚನೆಯವರೆಗೂ ಆಂಗ್ಲೋ ಇಂಡಿಯನ್ ಸದಸ್ಯರ ನೇಮಕಾತಿ ಮಾಡುವಂತಿಲ್ಲ ಎಂದು ನ್ಯಾಯಪೀಠ ತಿಳಿಸಿರುವುದಾಗಿ  ಅಭಿಷೇಕ್ ಮನು ಸಿಂಘ್ವಿ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ನಡುವೆ, ಸುಪ್ರೀಂಕೋರ್ಟ್ ಇಂದು ನೀಡಿರುವ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ,  ನಾಳೆ ವಿಶ್ವಾಸಮತಯಾಚನೆ ಪರೀಕ್ಷೆಯಲ್ಲಿ ಯಶಸ್ವಿಯಾಗಲಿದ್ದೇವೆ  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಯೊಂದಿಗೆ ಸಮಾಲೋಚಿಸಲಾಗುವುದು, ನಾಳೆ ಸದನವನ್ನು ಕರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ. ನಾಳೆ ಕರ್ನಾಟಕ ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಬಹುಮತ ಸಾಬೀತುಪಡಿಸುವ ಬಗ್ಗೆ ಸಂಪೂರ್ಣ ವಿಶ್ವಾಸವಿರುವುದಾಗಿ ಆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿಯಾಗಿದ್ದ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಮತ್ತೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಹೈದರಾಬಾದ್‌ನ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.