ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿ ಎರಡನೇ ದಿನವಾದ ಇಂದು ಕೂಡ ಕೋಲ್ಕತ್ತ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ವಿಚಾರಣೆ ಆರಂಭಿಸಿದ ಸಿಬಿಐ.

ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಇಂದೂ ಕೂಡ ಕೋಲ್ಕೊತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮೇಘಾಲಯದ ಶಿಲ್ಲಾಂಗ್‌ನಲ್ಲಿ ವಿಚಾರಣೆಗೆ ಒಳಪಡಿಸಿದೆ. ನಿನ್ನೆ ಕೂಡ ಸುಮಾರು ಎಂಟು ಗಂಟೆಗಳ ಕಾಲ ರಾಜೀವ್ ಕುಮಾರ್ ಅವರ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ವೇಳೆ ಪೊಲೀಸ್ ಆಯುಕ್ತರಿಗೆ ದೌರ್ಜನ್ಯವೆಸಗದಂತೆ ಖಾತರಿ ಪಡಿಸಲು ಮ್ಯಾಜಿಸ್ಟೇಟರ್ ಅವರೂ ಹಾಜರಾಗುವಂತೆ ಸಿಬಿಐ ಮನವಿ ಮಾಡಿತ್ತು.ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎದುರು ಹಾಜರಾಗಿ ತನಿಖೆಗೆ ಸಹಕಾರ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿತ್ತು.ಅವರನ್ನು ಬಂಧಿಸದಂತೆಯೂ ನ್ಯಾಯಾಲಯ ಸೂಚನೆ ನೀಡಿತ್ತು.ಈ ಮಧ್ಯೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ರಾಜ್ಯಸಭಾ ಮಾಜಿ ಸದಸ್ಯ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್‌ಗೆ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.